ಆದ್ಯೊತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆ ಕುಮಟಾ ದಿವಗಿ ಹಾಲಕ್ಕಿ ಸಮುದಾಯ ಭವನದಲ್ಲಿ ಬಿಜೆಪಿ ರೈತಮೋರ್ಚಾ ಪದಾಧಿಕಾರಿಗಳ ಸಭೆ ನಡೆಯಿತು.


ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಕುಮಾರ್ ಮಾತನಾಡಿ,ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಅವರ ನೋವಿಗೆ ಧ್ವನಿಯಾಗಬೇಕು. ಕೇಂದ್ರ ಸರ್ಕಾರದ ಯೋಜನೆ ಹಾಗೂ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳ ಮಾಹಿತಿಯನ್ನು ಪ್ರತಿ ಮನೆಗೂ ತಲುಪಿಸುವ ಕಾರ್ಯ ನಮ್ಮ ಸಂಘಟನೆಯ ಪ್ರಮುಖ ಗುರಿಯಾಗಬೇಕು.ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ರೈತ ಮೋರ್ಚಾವನ್ನು ಚಟುವಟಿಕೆಯಿಂದ ಇರಿಸುವ ಬಗ್ಗೆ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.


ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ಜಿಲ್ಲೆಯ ಅಡಿಕೆ ಬೆಳೆಗಾರರನ್ನು ಕಂಗಾಲಾಗಿಸಿರುವ ಎಲೆ ಚುಕ್ಕಿ ರೋಗದ ಬಗ್ಗೆ ಹಾಗೂ ಮಳೆ ಮಾಪನ ಯಂತ್ರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಪರಿಹಾರ ಹಾಗೂ ಸಂಕಷ್ಟದಲ್ಲಿರುವ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಪಡೆದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಕರ್ಕಿ ಮಾತನಾಡಿ, ಪಕ್ಷದ ನಿಜವಾದ ಶಕ್ತಿ ಇರುವುದು ಬೂತ್ ಮಟ್ಟದ ಕಾರ್ಯಕರ್ತರಲ್ಲಿ. ಪ್ರತಿಯೊಬ್ಬ ಕಾರ್ಯಕರ್ತನನ್ನು ವಿಶ್ವಾಸಕ್ಕೆ ಪಡೆದು, ಸಂಘಟನೆಯಲ್ಲಿ ಸಕ್ರಿಯವಾಗಿ ಜೋಡಿಸಿಕೊಂಡಾಗ ಮಾತ್ರ ಮುಂಬರುವ ಸವಾಲುಗಳನ್ನು ಎದುರಿಸಲು ಮತ್ತು ಪಕ್ಷವನ್ನು ಗಟ್ಟಿಯಾಗಿ ಕಟ್ಟಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರೈತ ಮೋರ್ಚಾ ಪ್ರಭಾರಿ ಪ್ರಶಾಂತ್ ನಾಯ್ಕ ಮಾತನಾಡಿ, ಪ್ರತಿಯೊಬ್ಬ ಪದಾಧಿಕಾರಿಯು ತನ್ನ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದರೆ ರೈತ ಮೋರ್ಚಾ ಜಿಲ್ಲೆಯಲ್ಲಿ ಮಾದರಿಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅಶೋಕ್ ಚಲವಾದಿ , ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣುಮೂರ್ತಿ ಹೆಗಡೆ, ಶಿವಲಿಂಗಯ್ಯ ಅಲ್ಲಯ್ಯನವರಮಠ, ಜಿಲ್ಲಾ ಮತ್ತು ಮಂಡಲ ಮಟ್ಟದ ರೈತ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
