ಕರ್ನಾಟಕ ಬಂದ್ ಯಶಸ್ಸು, ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಸೀಮಿತ

ಆದ್ಯೋತ್ ಸುದ್ದಿನಿಧಿ:
ರೈತ ವಿರೋಧಿ ಭೂಸುಧಾರಣಾ ಹಾಗೂ ಎಪಿಎಂಸಿ ವಿಧೇಯಕ,ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಯಾವುದೇ ಚರ್ಚೆ ಇಲ್ಲದೆ ಜಾರಿಗೊಳಿಸಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿರುದ್ದ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್ ಗೆ ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿದ್ದರೂ ಉತ್ತಮ ಪ್ರತಿಕ್ರಿಯೆ ದೊರಕಿದೆ.

ಬೆಂಗಳೂರಿನಲ್ಲಿ ಸಾವಿರಾರು ಮಂದಿ ವಿವಿಧ ಕಡೆಗಳಿಂದ ಮೆರವಣಿಗೆ ಮೂಲಕ ಟೌನ್ ಹಾಲ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕೂಡ ಸಾಥ್ ನೀಡಿದ ಕಾರಣ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.
ಪುರಭವನದ ಬಳಿ ರೈತರ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಇದು ಸಾಂಕೇತಿಕ ಪ್ರತಿಭಟನೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ.ಕೃಷಿಗೆ ಮಾರಕವಾದ ರೈತರಿಗೆ ಮರಣಶಾಸನವಾದ ಈ ಕಾಯ್ದೆಗಳನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ರೈತಮುಖಂಡರಾದ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆ ಖಂಡಿಸಿದರು. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಈ ಬಂದ್ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹೇಳಿದರು.

ಇನ್ನು ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ರಾಮನಗರ, ರಾಯಚೂರು, ಬೀದರ್, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಜೋರಾಗಿದ್ದರೆ ಚಾಮರಾಜನಗರ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಪುಟ್ಟ ಪ್ರತಿಭಟನೆಗೆ ಸೀಮಿತವಾಗಿತ್ತು.
ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿದರೆ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ರಸ್ತೆ ತಡೆ, ಧರಣಿ, ಪ್ರತಿಭಟನೆ ನಡೆಸಿದವು. ಹಲವೆಡೆ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಾರಾಯಣಗೌಡ ನೇತೃತ್ವದಲ್ಲಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಪೊಲೀಸರು ಕಾರ್ಯಕರ್ತರನ್ನು ರೈಲ್ವೆ ನಿಲ್ದಾಣದ ಒಳಗೆ ಬಿಡದೆ ತಡೆದು ಹಲವರನ್ನು ತಮ್ಮ ವಶಕ್ಕೆ ಪಡೆದರು.
ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ ಕರವೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಲಾಯಿತು.
ಹುಬ್ಬಳ್ಳಿಯಲ್ಲಿ ಅಟೋ ಮಾಲಿಕ ಸಂಘದವರು ಚನ್ನಮ್ಮ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯಸರಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ವಿಧೇಯಕವನ್ನು ಜಾರಿಗೊಳಿಸದಂತೆ ಪ್ರತಿಭಟನೆ ನಡೆಸಿದರಲ್ಲದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿಯನ್ನು ದಹಿಸಿದರು.

**********************************
ಉತ್ತರಕನ್ನಡ ಜಿಲ್ಲೆಯಲ್ಲಿ ಬಂದ್ ನಡೆಯದಿದ್ದರೂ ಪ್ರತಿಭಟನೆ ನಡೆಯಿತು.ಕೆಲವು ತಾಲೂಕಿನಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.

ಶಿರಸಿಯಲ್ಲಿ ಭೂಮಿಹಕ್ಕು ಹೋರಾಟಗಾರರ ಮುಖಂಡ ರವೀಂದ್ರ ನಾಯ್ಕ ಸೇರಿದಂತೆ ಹಲವು ಸಂಘಟನೆಯ ಮುಖಂಡರು ಟೈರ್ ಗೆ ಬೆಂಕಿಹಚ್ಚಿ ಪ್ರತಿಭಟನೆ ನಡೆಸಿದರಲ್ಲದೆ ಉಪವಿಭಾಗಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ಕಾರವಾರದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಿದ್ದರೂ ಪ್ರತಿಭಟನೆ ಕಾವು ಪಡೆದುಕೊಳ್ಳಲಿಲ್ಲ.ಸಿಐಟಿಯು ಕಾರ್ಯಕರ್ತರು ಕೆಲವು ಕಾಲ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದರಲ್ಲದೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಿದ್ದಾಪುರದಲ್ಲಿ ರೈತಸಂಘದ ಅಧ್ಯಕ್ಷ ವೀರಭದ್ರ ನಾಯ್ಕ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರಲ್ಲದೆ ರಾಮಕೃಷ್ಣವೃತ್ತದಲ್ಲಿ ಧರಣಿ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

****

About the author

Adyot

Leave a Comment